*ವೈಜ್ಞಾನಿಕ ಮನೋಭಾವನೆ ಬೆಳೆಸಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿ: ಈರಗೌಡ ಪಾಟೀಲ*
ರಾಯಬಾಗ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಸೃಜನಶೀಲತೆ ಹಾಗೂ ಸಂಶೋಧನಾ ಮನೋಭಾವ ಬೆಳೆಸಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು.
ತಾಲೂಕಿನ ಬಾವನ ಸವದತ್ತಿಯ ಆದರ್ಶ ಶಿಕ್ಷಣ ಸಂಸ್ಥೆಯ ಬಾಜಿರಾವ ಮಗದುಮ್ ಪ್ರೌಢ ಶಾಲೆಯಲ್ಲಿ ಶನಿವಾರ ದಿ. 27 ರಂದು ಹಮ್ಮಿಕೊಂಡ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯ ಜ್ಞಾನಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ, ತಾರ್ಕಿಕ ಚಿಂತನೆ ಹಾಗೂ ಹೊಸ ಅನ್ವೇಷಣೆಯ ಗುಣಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ಇಂತಹ ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವುದರ ಜೊತೆಗೆ, ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯನ್ನು ಒದಗಿಸುತ್ತವೆ ಎಂದು ಹೇಳಿದರು.
ವಿದ್ಯಾರ್ಥಿಗಳು ತಮ್ಮ ಕಲ್ಪನೆ ಮತ್ತು ಪ್ರಯೋಗಶೀಲತೆಯ ಮೂಲಕ ಸಮಾಜಕ್ಕೆ ಉಪಯುಕ್ತವಾಗುವ ಅನೇಕ ಮಾದರಿಗಳನ್ನು ಸಿದ್ಧಪಡಿಸಿರುವುದು ಅತ್ಯಂತ ಶ್ಲಾಘನೀಯ. ವಿಜ್ಞಾನವನ್ನು ಕೇವಲ ಪುಸ್ತಕದ ವಿಷಯವಾಗಿ ನೋಡದೆ, ಜೀವನದ ಭಾಗವಾಗಿ ಅರ್ಥೈಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮುಖ್ಯಾಧ್ಯಾಪಕರಾದ ಶ್ರೀ ಅರುಣ ಸಲಗರೆ ಅವರು ಉಪಸ್ಥಿತರಿದ್ದರು. ಪ್ರದರ್ಶನದಲ್ಲಿ ಒಟ್ಟು 43 ವಿದ್ಯಾರ್ಥಿಗಳು ಸ್ವತಃ ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅವುಗಳ ಕಾರ್ಯವಿಧಾನದ ಕುರಿತು ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕರಾದ ಶ್ರೀ ವಿ.ಡಿ. ಗುರವ ಸ್ವಾಗತಿಸಿದರು. ಶ್ರೀ ಕೆ.ಬಿ. ಕಾಂಬಳೆ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಡಿ.ಆರ್. ಬೆಂಡೆ ವಂದಿಸಿದರು.
ವರದಿ:ಡಾ. ಜಯವೀರ ಎ. ಕೆ.
ಖೇಮಲಾಪುರ

.gif)

.gif)


0 Comments